ಬೆಂಗಳೂರು ಲಾಕ್ ಡೌನ್ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ !

ಬೆಂಗಳೂರು: ಕೊರೋನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಮಾತ್ರ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಆದರೆ ಯಾವುದೇ ಕಾರಣಕ್ಕೂ ವಾರದ ಬಳಿಕ ಲಾಕ್ ಡೌನ್ ವಿಸ್ತರಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ನಡೆದ ಟಾಸ್ಕ್ ಪೋರ್ಸ್ ಸಭೆಯ ಬಳಿಕ ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಎರಡೂ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಧಿಸಲಾಗಿದ್ದು, ಒಂದು ವಾರದೊಳಗೆ ವ್ಯವಸ್ಥೆಗಳನ್ನು ಸರಿಪಡಿಸಿಕೊಂಡು, ಎಲ್ಲ ಅಗತ್ಯ ಸಿದ್ದತೆ ಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ವಾರದ ಬಳಿಕ ನಗರದಲ್ಲಿ ಲಾಕ್ ಡೌನ್ ಅನ್ನು ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ಯಾವುದೇ ಕಾರಣಕ್ಕೆ ಆತಂಕಪಡದೆ, ವದಂತಿಗಳಿಗೆ ಕಿವಿಗೊಡದೆ, ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಜನರಲ್ಲಿ ಕೋರಿದ್ದಾರೆ.
ಇಂದಿನ ಸಭೆಯಲ್ಲಿ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಬೆಡ್ ಗಳನ್ನು ಬಾಡಿಗೆ ತಂದಿರುವುದು, ಉಪಕರಣಗಳು ಹಾಗೂ ಅಗತ್ಯ ಸೌಲಭ್ಯಗಳನ್ನು ಬಾಡಿಗೆ ಪಡೆದಿರುವುದಕ್ಕೆ ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಗಮನಕ್ಕೆ ತರದೆ ಇಷ್ಟೊ ದೊಡ್ಡ ತೀರ್ಮಾನ ಕೈಗೊಂಡಿದ್ದು ಯಾರೂ ಎಂದು ಮುಖ್ಯಮಂತ್ರಿ ಅಧಿಕಾರಿಗಳನ್ನು ಹಾಗೂ ಸಚಿವರನ್ನು ಪ್ರಶ್ನಿಸಿದ್ದಾರೆ.