
ಬೆಂಗಳೂರು : ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳುವ ಮುನ್ಸೂಚನೆಯಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುವ ನಿರೀಕ್ಷೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರಿನಲ್ಲಿ ಸಾಧಾರಣ ಮಳೆ ಸುರಿಯಲಿದೆ.
ಮಳೆಯ ಪ್ರಮಾಣ ಎಷ್ಟು?:
ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಸಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲೂ ಸೋಮವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು, ಮಳೆಯ ದಾಖಲೆಯ ಪ್ರಕಾರ, 15 ಮಿ.ಮೀ ಮಳೆಯನ್ನು ಅಲ್ಪ, 15 ರಿಂದ 64.5 ಮಿ.ಮೀ ಮಳೆಯನ್ನು ಸಾಧಾರಣ ಮತ್ತು 64.5 ಮಿ.ಮೀಟರ್ ಗಿಂತ ಹೆಚ್ಚಿನ ಮಳೆಯನ್ನು ಭಾರಿ ಮಳೆ ಎಂದು ಗುರುತಿಸಲಾಗುತ್ತದೆ.