ಸಂಘಟನೆ, ಕ್ರಿಯಾಶೀಲತೆಯಿಂದ ಗ್ರಾಮ ಪಂಚಾಯತ್ ಚುನಾವಣೆ ಎದುರಿಸಿ : ಕೋಟ

ಉಡುಪಿ : ಕೋವಿಡ್-19 ಪರಿಣಾಮವಾಗಿ ಸಾಮಾಜಿಕ ಅಂತರ ಕಾಪಾಡುವ ದೃಷ್ಟಿಯಿಂದ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಮುಂದೂಡಲಾಗಿದ್ದು ಶೀಘ್ರದಲ್ಲೇ ನವೆಂಬರ್ ಡಿಸೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯುವ ಎಲ್ಲಾ ಸಾಧ್ಯತೆಗಳಿವೆ. ಸದ್ರಿ ಗ್ರಾಮ ಪಂಚಾಯತ್ ಚುನಾವಣೆಯನ್ನು ಪಕ್ಷದ ಕಾರ್ಯಕರ್ತರು ಸವಾಲಾಗಿ ಸ್ವೀಕರಿಸಿ ಸಂಘಟನೆ, ಕ್ರಿಯಾಶೀಲತೆ ಮತ್ತು ಪರಿಣಾಮಕಾರಿ ಅಗತ್ಯ ಚಟುವಟಿಕೆಗಳಿಂದ ಗೆಲುವಿನ ಗುರಿಯತ್ತ ತೊಡಗಿಸಿಕೊಳ್ಳಬೇಕು ಎಂದು ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ, ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಮತ್ತು ದ.ಕ. ಜಿಲ್ಲಾ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿ ಗಳು, ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ಸಭೆಯನ್ನುದ್ದೇಶಿಸಿ ಮಾತಾಡಿದರು.

ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿತ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಯು ಸಂಪೂರ್ಣವಾಗಿ ಉಚಿತವಾಗಿದೆ. ಸಾರ್ವಜನಿಕರು ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿತ ಆಸ್ಪತ್ರೆಗಳಲ್ಲೇ ಕೊರೋನಾ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಬಹುದು. ಇತ್ತೀಚೆಗೆ ಕೊರೋನಾ ವಿಚಾರವಾಗಿ ಅಧಾರ ರಹಿತ ಆರೋಪಗಳು ಕೇಳಿಬರುತ್ತಿವೆ. ಇವೆಲ್ಲವೂ ಸತ್ಯಕ್ಕೆ ದೂರವಾಗಿದ್ದು ಜನತೆ ವದಂತಿಗಳಿಗೆ ಕಿವಿಗೊಡದೆ ಸರಕಾರದ ಆರೋಗ್ಯ ಸುರಕ್ಷಾ ಮಾರ್ಗಸೂಚಿ ಗಳನ್ನು ಪಾಲಿಸುವುದು ಇಂದಿನ ಅಗತ್ಯತೆಯಾಗಿದೆ. ಪ್ರತೀ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಕೊರೋನಾ ಕಾರ್ಯಪಡೆಯ ಸಭೆಗಳನ್ನು ನಡೆಸಿ ಅಗತ್ಯ ತುರ್ತು ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳುವುದು ಅವಶ್ಯಕ. ಕೊರೋನಾ ವಾರಿಯರ್ಸ್ ಗಳಿಗೆ ಸಹಕರಿಸುವ ಜೊತೆಗೆ ಸ್ವಯಂ ಜಾಗೃತಿಯಿಂದ ಕೊರೋನಾ ಸಂಕಷ್ಟದಿಂದ ಪಾರಾಗೋಣ ಎಂದರು.
ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆ ಯಲ್ಲಿ ಬಿಜೆಪಿಗೆ ಪೂರಕ ವಾತಾವರಣವಿದ್ದು ಕಾರ್ಯಕರ್ತರು ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡು ಅವಕಾಶದ ಸದುಪಯೋಗ ಪಡೆದುಕೊಳ್ಳುವುದು ಅವಶ್ಯಕ. ನಿಗಧಿತ ಮೀಸಲಾತಿಯಂತೆ ಆಯಾ ವಾರ್ಡ್ ಗಳಲ್ಲಿ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಹಾಗೂ ಪರಿಣಾಮಕಾರಿ ಚುನಾವಣಾ ಕಾರ್ಯತಂತ್ರ ರೂಪಿಸುವುದು ಪ್ರಾಮುಖ್ಯತೆ ಹೊಂದಿದೆ. ಪ್ರತೀ ಬೂತ್, ಮಹಾ ಶಕ್ತಿಕೇಂದ್ರ, ಮಂಡಲ ಮತ್ತು ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ವಿವಿಧ ಸ್ತರದ ಜನಪ್ರತಿನಿಧಿಗಳು ಕಾರ್ಯಕರ್ತರೊಂದಿಗೆ ಒಂದು ತಂಡವಾಗಿ ತೊಡಗಿಸಿಕೊಂಡು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪ್ರಚಂಡ ಗೆಲುವಿಗೆ ಕಂಕಣ ಬದ್ಧರಾಗಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ರಾಜ್ಯ ಮಟ್ಟದ ವಿವಿಧ ಮೋರ್ಚಾ ಗಳಿಗೆ ನೂತನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳನ್ನು ಅಭಿನಂದಿಸಿದರು. ಕೊರೋನಾ ಬಗ್ಗೆ ವಿರೋಧ ಪಕ್ಷಗಳ ಆರೋಪದಲ್ಲಿ ಹುರುಳಿಲ್ಲ. ವೈದ್ಯಕೀಯ ಚಿಕಿತ್ಸೆಯ ನಿಯಮದಂತೆ ಕೊರೋನಾ ರಾಪಿಡ್ ಟೆಸ್ಟ್, ಲ್ಯಾಬ್ ಟೆಸ್ಟ್ ಇತ್ಯಾದಿಗಳು ನಡೆಯುತ್ತಿವೆ. ಈ ವಿಚಾರದಲ್ಲಿ ಯಾವುದೇ ತಪ್ಪು ಕಲ್ಪನೆ ಅನಗತ್ಯ. ಕೊರೋನಾ ಪಾಸಿಟಿವ್ ಚಿಕಿತ್ಸೆಯ ಬಗ್ಗೆ ದಿನ ಒಂದಕ್ಕೆ ಬೆಡ್ ಚಾರ್ಜ್ ರೂ.5,200 ಹಾಗೂ ವೆಂಟಿಲೇಟರ್ ಸಹಿತ ಬೆಡ್ ಚಾರ್ಜ್ ರೂ.10,000 ವನ್ನು ರಾಜ್ಯ ಸರಕಾರವೇ ಭರಿಸುತ್ತದೆ. ಕೊರೋನಾ ಸಂಬಂಧಪಟ್ಟಂತೆ ವೈದ್ಯರ ಹಾಗೂ ಕೊರೋನಾ ವಾರಿಯರ್ಸ್ ಗಳ ಮಾನಸಿಕ ಸ್ಥೈರ್ಯ ಕುಗ್ಗದಂತೆ ಸಾರ್ವಜನಿಕರು ಸಹಕರಿಸಬೇಕಾಗಿದೆ ಎಂದರು.
ಮುಂಬರಲಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪ್ರತೀ ಬೂತ್ ಗಳಿಗೆ ಚೈತನ್ಯ ತುಂಬಿ ಸಾಮೂಹಿಕ ಪ್ರಯತ್ನದ ಮೂಲಕ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಲು ಎಲ್ಲರೂ ಶ್ರಮ ವಹಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ, ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ ಸ್ವಾಗತಿಸಿ, ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.