ಸೆ.24ರಿಂದ ರಾಜ್ಯದಲ್ಲಿ ‘ಆರೋಗ್ಯ ಇಲಾಖೆ’ಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ, ಆರೋಗ್ಯ ಸೇವೆಯಲ್ಲಿ ವ್ಯತ್ಯಯ
ಬೆಂಗಳೂರು : ರಾಜ್ಯದ ಆರೋಗ್ಯ ಇಲಾಖೆಯ ಅಡಿಯಲ್ಲಿನ ವಿವಿಧ ಇಲಾಖೆಯಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಕೀಯ, ಅರೆವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸೆಪ್ಟೆಂಬರ್ 24ರಿಂದ ಅನಿರ್ಧಿಷ್ಟಾವಧಿಯವರೆಗೆ ಪ್ರತಿಭಟನೆ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರ ಗುತ್ತಿಗೆ ನೌಕರರ ಸಂಘದ ರಾಜ್ಯ ಮಾಧ್ಯಮ ಕಾರ್ಯದರ್ಶಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಆದ ವೈದ್ಯಕೀಯ, ಅರೆವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿಗಳ ಹಲವಾರು ವರ್ಷಗಳ ಬೇಡಿಕೆಗಳ ಈಡೇರಿಕೆಗಾಗಿ ದಿನಾಂಕ 21.9.2020 ಕೆ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ CEO ಹಾಗೂ ಇತರೆ ಅಧಿಕಾರಿಗಳಿಗೆ ಬೇಡಿಕೆ ಈಡೇರಿಕೆ ಹಾಗೂ ಮುಷ್ಕರದ ಬಗ್ಗೆ ಮನವಿ ಸಲ್ಲಿಸಲಾಗುತ್ತಿದೆ.
ದಿನಾಂಕ 22.9.2020 ರಿಂದ ಎಲ್ಲಾ ರಾಷ್ಟ್ರೀಯ ಕಾರ್ಯಕ್ರಮಗಳ, Covid 19 ಮತ್ತು ಆರ್ಥಿಕ ಹಾಗೂ ಭೌತಿಕ ವರದಿಗಳನ್ನು ಸಲ್ಲಿಸದೆ ಇರುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ದಿನಾಂಕ 24.9.2020 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ತೀರ್ಮಾನಿಸಲಾಗಿದೆ. ನಮ್ಮ ಬೇಡಿಕೆ ಗಳನ್ನು ರಾಜ್ಯ ಸರ್ಕಾರ ಈಡೇರಿಸುವವರೆಗೆ ಪ್ರತಿಭಟನೆ ಮುಂದುವರೆಸಲಾಗುತ್ತದೆ. ಏನೇ ಬರಲಿ ಒಗ್ಗಟು ಇರಲಿ, ಛಲವಿದ್ದಲ್ಲಿ ಫಲ ಇರುತ್ತೆ ಎಂಬುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ, ವೈದ್ಯಕೀಯ ಇಲಾಖೆ, ಎನ್ ಆರ್ ಹೆಚ್ ಎಂ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ, ಹೊರ ಗುತ್ತಿಗೆ ನೌಕರರು ಸೆ.24ರಿಂದ ಅನಿರ್ಧಿಷ್ಟಾವಧಿಯವರೆಗೆ ಮುಷ್ಕರದಲ್ಲಿ ನಿರತರಾಗುವ ಕಾರಣ, ರಾಜ್ಯದಲ್ಲಿ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.