
ಮಹಾರಾಷ್ಟ್ರದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಯಘಡ ಜಿಲ್ಲೆಯಲ್ಲಿ ಭೂ ಕುಸಿತ ಉಂಟಾಗಿ ಕನಿಷ್ಠ 36 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ರಾಯಘಡ ಜಿಲ್ಲೆಯ ತಲಾಯಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ .
ಸದ್ಯ ಘಟನೆಯ ಪ್ರಾಥಮಿಕ ಮಾಹಿತಿಯಷ್ಟೇ ಲಭಿಸಿದ್ದೂ ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಮುಂಬೈನಿಂದ 160 ಕಿ.ಮೀ ದೂರದಲ್ಲಿರುವ ಈ ಗ್ರಾಮಕ್ಕೆ ಎನ್‍ಡಿಆರ್‍ಎಫ್ ಮತ್ತು ರಕ್ಷಣಾ ಪಡೆಗಳು ಧಾವಿಸಿವೆ.
ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ 30ಕ್ಕೂ ಹೆಚ್ಚು ಶವಗಳನ್ನು ಹೊರತೆಗೆಯಲಾಗಿದೆ. ಮತ್ತಷ್ಟು ಮಂದಿ ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.ಕಳೆದೆರಡು ದಿನಗಳಲ್ಲಿ ಮಹಾರಾಷ್ಟ್ರ ದಲ್ಲಿ ಸುರಿಯುತ್ತಿರುವ ಮಳೆಗೆ ಕನಿಷ್ಠ 50 ಮಂದಿ ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತ ಪಟ್ಟ 36 ಜನರ ಪೈಕಿ ತಲಾಯಿ ಗ್ರಾಮದಲ್ಲಿ 32 ಮಂದಿ ಮತ್ತು ಸಖರ್ ಸುತಾರ್ ವಾಡಿಯಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಈ ಭೂ ಕುಸಿತದಲ್ಲಿ ಇನ್ನೂ ಕನಿಷ್ಠ 30 ಜನರು ಸಿಕ್ಕಿಬಿದ್ದಿದ್ದಾರೆ ಎಂದು ರಾಯಗಡ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ.