
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ವಿಶ್ವ ಪ್ರಸಿದ್ಧ ಹೃದಯ ತಜ್ಞ, ಕರ್ನಾಟಕದ ಪುತ್ರ ಡಾ. ದೇವಿಪ್ರಸಾದ್ ಶೆಟ್ಟಿ ಅವರು ಸಂಪುಟ ಸೇರುವ ಸಾಧ್ಯತೆಗಳಿವೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.
ಕೊರೊನಾ ಎರಡನೇ ಅಲೆಯ ಆರ್ಭಟ ಹಾಗೂ ಬರಲಿದೆ ಎನ್ನಲಾದ ಮೂರನೇ ಅಲೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದ ಮುಖ್ಯಸ್ಥರೂ ಆಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ಅವರನ್ನು ಕೇಂದ್ರ ಆರೋಗ್ಯ ಸಚಿವರನ್ನಾಗಿ ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
.
ಈಗಿರುವ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ ಅವರ ಕಾರ್ಯವೈಖರಿ ಈಗಾಗಲೇ ಸಾರ್ವಜನಿಕರ ಟೀಕೆಗೆ ಒಳಗಾಗಿದೆ. ಅಷ್ಟೇ ಅಲ್ಲದೆ ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ಡಾ. ಹರ್ಷವರ್ಧನ ನೇತೃತ್ವದ ಆರೋಗ್ಯ ಇಲಾಖೆ ವಿಫಲವಾಗಿದೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರನ್ನು ಬದಲಾಯಿಸುವ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಿದ್ದಾರೆ ಎನ್ನಲಾಗಿದೆ.
ಕೊರೊನಾ ಮೂರನೇ ಅಲೆಯ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ಅವರ ಹೆಗಲಿಗೆ ಆರೋಗ್ಯ ಇಲಾಖೆಯ ಜವಾಬ್ದಾರಿಯನ್ನು ಕೊಟ್ಟು ಹರ್ಷವರ್ಧನ ಅವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ನೀಡುವ ಕುರಿತು ಕೇಂದ್ರ ಚಿಂತನೆ ನಡೆಸಿದೆ ಎನ್ನಲಾಗಿದೆ.