ತೈಲ ಬೆಲೆಯೇರಿಕೆ ವಿರುದ್ಧ ಪ್ರತಿಭಟನೆ: ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸಹಿತ ಹಲವರ ಬಂಧನ
ಬೆಂಗಳೂರು ( Udupi News ):ದೇಶದಲ್ಲಿ ತೈಲ ಬೆಲೆಯೇರಿಕೆಯ ವಿರುದ್ದ ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಮಂದಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಲ್ಲಿ ಪೆಟ್ರೋಲ್ ಬೆಲೆ 100ರ ಗಡಿದಾಟುತ್ತಿದ್ದಂತೆಯೇ ಕೆಪಿಸಿಸಿ 5 ದಿನಗಳ ಪ್ರತಿಭಟನೆಗೆ ಕರೆ ನೀಡಿತ್ತು. ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ 5000 ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಬೆಂಗಳೂರಿನ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಕೋವಿಡ್ ನಿಯಮದ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯ ವರೆಗೆ ಮಾತ್ರವೇ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರಿಗೆ ಅನುಮತಿ ನೀಡಲಾಗಿತ್ತು. ಆದರೆ 10 ಗಂಟೆಯ ನಂತರವೂ ಪ್ರತಿಭಟನೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಕೈ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.