ರಾಜ್ಯ

ನಕಲಿ ರಸಗೊಬ್ಬರ, ಬಿತ್ತನೆ ಬೀಜ ಮಾರಾಟ ಮಾಡಿದರೆ ಬೀಳುತ್ತೆ ಕ್ರಿಮಿನಲ್ ಕೇಸ್, ಕೃಷಿ ಸಚಿವರ ಖಡಕ್ ವಾರ್ನಿಂಗ್

ಶಿವಮೊಗ್ಗ: ನಕಲಿ ಹಾಗೂ ಹಳೇ ಸ್ಟಾಕ್ ಇರುವ ರಸಗೊಬ್ಬರ ಮಾರಾಟ ಮಾಡಿದ್ದಲ್ಲಿ ಅಂತಹವರ ವಿರುದ್ಧ ಮುಲಾಜಿಲ್ಲದೇ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಭಾನುವಾರ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಕುರಿತು ಕೃಷಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು.

ಜಿಲ್ಲೆಯ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ಮತ್ತು ಬೀಜಗಳನ್ನು ದಾಸ್ತಾನು ಇರಿಸಲಾಗಿದೆ. ಬೀಜ ಮತ್ತು ರಸಗೊಬ್ಬರಗಳನ್ನು ದಾಸ್ತಾನು ಇರಿಸಿಕೊಂಡು ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಜಿಲ್ಲೆಯ ಕೆಲವು ಭಾಗಗಳಲ್ಲಿ ನಕಲಿ ಸಾವಯವ ಗೊಬ್ಬರಗಳನ್ನು ರೈತರಿಗೆ ಮಾರಾಟ ಮಾಡಿ ವಂಚಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಮುಂದಿನ ದಿನಗಳಲ್ಲಿ ನಕಲಿ ಸಾವಯವ ಗೊಬ್ಬರ ಮಾರಾಟ ಮಾಡುವವರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಳೆದ ಸಾಲಿನಲ್ಲಿ ಕ್ರಾಪ್ ಸರ್ವೆ ತಂತ್ರಾಂಶ ಅಭಿವೃದ್ಧಿ ಪಡಿಸಿದ ನಂತರ ರೈತರಿಗೆ ಬಹು ಉಪಯುಕ್ತವಾಗಿದೆ. ಕಳೆದ ಸಾಲಿನಲ್ಲಿ ಕೋಟಿಗೂ ಹೆಚ್ಚು ಜನ ರೈತರು ಕ್ರಾಪ್ ಸರ್ವೆ ನಲ್ಲಿ ಭಾಗವಹಿಸಿದ್ದರು. ಪ್ರಸ್ತುತ ರೈತರಿಗೆ ಉಪಯುಕ್ತವಾಗಿರುವ ಭೂಮಿ ತಂತ್ರಾಂಶವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ ಎಂದು ಪಾಟೀಲ್ ಹೇಳಿದರು.

ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಕುಮಾರ ಬಂಗಾರಪ್ಪ, ಕೆ.ಬಿ.ಅಶೋಕ್ ನಾಯ್ಕ, ಆಯನೂರು ಮಂಜುನಾಥ್, ಆರ್.ಪ್ರಸನ್ನಕುಮಾರ್ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker