
ಮಂಗಳೂರು, ಜು.13: ಕೊರೋನ ಸೋಂಕು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ ದ.ಕ.ಜಿಲ್ಲೆಯಲ್ಲಿ ಜಿಲ್ಲಾಡಳಿತ ಗುರುವಾರ (ಜುಲೈ16) ರಿಂದ 1 ವಾರ ಲಾಕ್‌ಡೌನ್‌ಗೆ ತೀರ್ಮಾನಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಇಂದು 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಹಾಗೂ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರ ಸಹಿತ ಹಲವು ಅಧಿಕಾರಿಗಳು ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ.
ಇಂದಿನಿಂದ ಬುಧವಾರದವರೆಗೆ ಎಲ್ಲಾ ವಾಣಿಜ್ಯ ವ್ಯವಹಾರಗಳು ತೆರೆದಿದ್ದು, ಸಾರ್ವಜನಿಕರು ಅಗತ್ಯ ಸಾಮಗ್ರಿಗಳು ಹಾಗೂ ಮೂಲಭೂತ ಅಗತ್ಯ ವಸ್ತುಗಳನ್ನು ಖರೀದಿಸಬೇಕು. ಬುಧವಾರ ರಾತ್ರಿಯಿಂದ ಒಂದು ವಾರ ನಡೆಯಲಿರುವ ಲಾಕ್‌ಡೌನ್ ಬಗ್ಗೆ ಜಿಲ್ಲಾಧಿಕಾರಿ ಮಾರ್ಗಸೂಚಿ ಹಾಗೂ ನಿಯಮಗಳನ್ನು ಪ್ರಕಟಿಸಲಿದ್ದಾರೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.