
ಕುಂದಾಪುರ, ಆ.8: ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಂದಾಪುರ ಬಸ್ರೂರು ಮೂರುಕೈನಿಂದ ವಿನಾಯಕ-ಕೋಡಿ ಜಂಕ್ಷನ್‌ವರೆಗಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜಲಾವೃತ್ತವಾಗಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಈ ಅವ್ಯವಸ್ಥೆಯನ್ನು ವಿರೋಧಿಸಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪದಾಧಿಕಾರಿಗಳು, ಶನಿವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಕಾರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾ.ಹೆದ್ದಾರಿಯಲ್ಲಿ ಮಳೆ ನೀರು ನಿಂತು ಕೆರೆಯಂತಾಗಿದ್ದು, ಶನಿವಾರ ಬೆಳಿಗ್ಗೆಯಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಕಂಡು ಬಂದಿದೆ. ಇದರಿಂದ ವಾಹನಗಳು ಸಾಲುಗಟ್ಟಿ ನಿಂತ ಪರಿಣಾಮ ಟ್ರಾಫಿಕ್ ಕಿರಿಕಿರಿ ಉಂಟಾಗಿತ್ತು. ಇದೇ ವೇಳೆ ಕುಂದಾಪುರದಲ್ಲಿ ಮೀನುಗಾರಿಕಾ ಇಲಾಖೆಯ ಕಾರ್ಯಕ್ರಮವನ್ನು ಮುಗಿಸಿ ಮಂಗಳೂರು ಕಡೆಗೆ ಹೋಗುತ್ತಿದ್ದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಕಾರನ್ನು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹಾಗೂ ಸ್ಥಳೀಯರು ತಡೆದು ನಿಲ್ಲಿಸಿದರು.
ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಆರಂಭದ ದಿನದಿಂದಲೂ ಇಲ್ಲಿ ಈ ಸಮಸ್ಯೆ ತಲೆದೋರಿದ್ದು, ಶೀಘ್ರವೇ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂದು ಸ್ಥಳೀಯರು ಸಚಿವರನ್ನು ಆಗ್ರಹಿಸಿದರು. ಆ ವೇಳೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸದ ಕಾರಣ ಹೋರಾಟ ಸಮಿತಿ ಪದಾಧಿಕಾರಿಗಳು ಹಾಗೂ ಸಚಿವರ ಮಧ್ಯೆ ವಾಗ್ವಾದ ನಡೆಯಿತು. ಬಳಿಕ ಸಚಿವರು, ಇಲ್ಲಿನ ಸಮಸ್ಯೆ ಪರಿಹರಿಸುವಂತೆ ಸ್ಥಳದಲ್ಲಿಯೇ ಜಿಲ್ಲಾಧಿಕಾರಿಗೆ ಕರೆ ಮಾಡಿ ಸೂಚನೆ ನೀಡಿದರು.