ಕರಾವಳಿ

5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಜ.23 ರಂದು ತಪ್ಪದೆ ಪೊಲಿಯೋ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯ 0-5 ವರ್ಷದೊಳಗಿನ ಪ್ರತಿಯೊಂದು ಮಕ್ಕಳಿಗೂ ಪೊಲಿಯೋ ಲಸಿಕೆಗಳನ್ನು ತಪ್ಪದೇ ಹಾಕಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಈ ಬಾರಿ ಪಲ್ಸ್ ಪೊಲಿಯೋ ಲಸಿಕೆಯನ್ನು ಜನವರಿ 23 ರಂದು ನೀಡಲಾಗುತ್ತಿದ್ದು, ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಲಸಿಕಾ ಕೇಂದ್ರಕ್ಕೆ ಕರೆದೊಯ್ದು ಲಸಿಕೆಯನ್ನು ತಪ್ಪದೇ ಹಾಕಿಸಬೇಕು. ಪೊಲಿಯೋ ಲಸಿಕೆ ಕಾರ್ಯಕ್ರಮದ ಬಗ್ಗೆ ತಮ್ಮ ನೆರೆ ಹೊರೆಯವರಿಗೂ ತಿಳಿಸಿ ಅವರ ಮಕ್ಕಳೂ ಸಹ ಲಸಿಕೆ ಹಾಕಿಸಿಕೊಳ್ಳುವಂತೆ ಅರಿವು ಮೂಡಿಸಬೇಕೆಂದರು.

ಜಿಲ್ಲೆಯಲ್ಲಿ 686 ಲಸಿಕಾ ಕೇಂದ್ರಗಳಲ್ಲಿ ಪೊಲಿಯೋ ಲಸಿಕೆಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಬಸ್ ನಿಲ್ದಾಣ, ರೈಲು ನಿಲ್ದಾಣ, ಪ್ರಮುಖ ಯಾತ್ರಾ ಸ್ಥಳಗಳು ಹಾಗೂ ಜಿಲ್ಲೆಯ ಬೀಚ್ಗಳಲ್ಲಿ ಸಹ ಲಸಿಕಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತವೆ ಎಂದರು.

ಲಸಿಕಾ ಕಾರ್ಯಕ್ರಮದ ಬಗ್ಗೆ ತಾಲೂಕು ಮಟ್ಟದ ಸಮಿತಿಗಳು ಸಭೆಯನ್ನು ಸೇರಿ ಆಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜನವರಿ 23 ರಂದು ಪೊಲಿಯೋ ಲಸಿಕೆ ನೀಡುವ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಈ ಬಾರಿ 74,049 ಮಕ್ಕಳಿಗೆ ಪಲ್ಸ್ ಪೊಲಿಯೋ ನೀಡಲು ಗುರುತಿಸಲಾಗಿದ್ದು, ಲಸಿಕೆ ನೀಡಲು ಆರೋಗ್ಯ ಸಿಬ್ಬಂದಿ, ಮೇಲ್ವಿಚಾರಕರು ಸೇರಿದಂತೆ ಮತ್ತಿತರ ಸಿಬ್ಬಂದಿಗಳ ನೇಮಕ ಮಾಡಲಾಗಿದ್ದು, ಎಲ್ಲಾ ಇಲಾಖಾ ಅಧಿಕಾರಿಗಳು ಪಲ್ಸ್ ಪೊಲಿಯೋ ಕಾರ್ಯಕ್ರಮ ಯಶಸ್ಸಿಗೆ ಕೈ ಜೋಡಿಸಬೇಕೆಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಡಿಹೆಚ್ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಜಿ.ರಾಮ ಹಾಗೂ ಅರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು

Related Articles

Leave a Reply

Your email address will not be published. Required fields are marked *

Back to top button
error: Content is protected !!