
ನೆರೆ ರಾಜ್ಯಗಳಲ್ಲಿ ಕೋವಿಡ್ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಪರಿಣಾಮವಾಗಿ ರಾಜ್ಯದಲ್ಲಿಯೂ ಪಾಸಿಟಿವ್ ಪ್ರಕರಣಗಳಲ್ಲಿ ವ್ಯಾಪಕವಾಗಿ ಹೆಚ್ಚಳವಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆಗಳಿವೆ ಎಂಬ ಚರ್ಚೆಗಳು ಸಾರ್ವಜನಿಕ ವಲಯಗಳಲ್ಲಿ ಕೇಳಿಬರುತ್ತಿವೆ.
ಆದರೆ ಬುಧವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ಸೋಂಕು ತಡೆಗಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಹಾಗೂ ರಾತ್ರಿ ಕರ್ಫ್ಯೂ ಜಾರಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರತಿನಿತ್ಯ 3ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದ ಮುಖ್ಯಮಂತ್ರಿ, ಕಳೆದ 10 ದಿನಗಳಲ್ಲಿ ಬೀದರ್, ಬೆಂಗಳೂರು, ಕಲಬುರಗಿ ಜಿಲ್ಲೆಗಳಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿವೆ ಎಂದು ಹೇಳಿದರು. ಸೋಂಕು ಹೆಚ್ಚಾಗಿರುವ ಕಡೆಗಳಲ್ಲಿ ಕೋವಿಡ್ ಸೆಂಟರ್ ಮತ್ತು ಲಸಿಕಾ ಅಭಿಯಾನ ಚುರುಕುಗೊಳಿಸಲಾಗುವುದು ಎಂದರು.