
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಅಗಸ್ಟ್ ೨೩ ರಿಂದ ೯, ೧೦, ೧೧ ಹಾಗೂ ೧೨ ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿಂದು ತಜ್ಞರು, ಶಿಕ್ಷಣ ತಜ್ಞರು, ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದರು. ಈ ವೇಳೆಯಲ್ಲಿ ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆ ಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಆರಂಭಿಕ ಹಂತದಲ್ಲಿ ೯ ರಿಂದ ೧೨ ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಎರಡು ಪಾಳಿಯಲ್ಲಿ ಶಾಲೆಗಳು ನಡೆಯಲಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಎರಡು ವಿಭಾಗಗಳನ್ನಾಗಿ ಮಾಡಿಕೊಂಡು ವಾರದಲ್ಲಿ ಮೂರು ದಿನಗಳ ಕಾಲ ಎರಡು ಪಾಳಿಯಲ್ಲಿ ತರಗತಿ ನಡೆಯಲಿದೆ ಎಂದಿದ್ದಾರೆ.
ಅಗಸ್ಟ್ ಅಂತ್ಯದಲ್ಲಿ ಮತ್ತೊಂದು ಬಾರಿ ಸಭೆಯನ್ನು ನಡೆಸಲಾಗುತ್ತದೆ. ಕೊರೊನಾ ವೈರಸ್ ಸೋಂಕಿನ ಪ್ರಮಾಣವನ್ನು ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೊರೊನಾ ವೈರಸ್ ಸೋಂಕು ಕಡಿಮೆಯಾದ್ರೆ ಸಪ್ಟೆಂಬರ್ ತಿಂಗಳಿನಿಂದ ಪ್ರಾಥಮಿಕ ಶಾಲೆಗಳನ್ನು ಕೂಡ ಆರಂಭಿಸಲಾಗುತ್ತದೆ ಎಂದಿದ್ದಾರೆ.