ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ : ಮಾಸ್ಕ್ ಧರಿಸದೇ ಓಡಾಡುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ..!

ಉಡುಪಿ, ಕೊರೊನಾ ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ ಉಡುಪಿಯಲ್ಲಿ ಇನ್ನು ಮುಂದೆ ಮಾಸ್ಕ್ ಧರಿಸದೇ ಓಡಾಟ ನಡೆಸುವವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಯನ್ನು ನಡೆಸಲು ಉಡುಪಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.
ಕೋವಿಡ್19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು, ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದಂತಹ ಶಿಷ್ಟಾಚಾರಗಳ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತವು ಸಾರ್ವಜನಿಕರ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡುವುದು, ಕರೋನಾ ಸಂಬಂಧಿತ ಸರ್ಕಾರದ ಇತರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶವನ್ನು ನೀಡಿದೆ.
ಇಷ್ಟಾದರೂ ಕೂಡ ಜಿಲ್ಲೆಯಲ್ಲಿ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿ, ತೀರ ನಿರಾಸದಾಯಕವಾದ ವರ್ತನೆಯನ್ನು ತೋರುತ್ತಿರುವುದರಿಂದ, ಕರೋನಾ ಸಾಂಕ್ರಮಿಕವು ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚಳವಾಗುತ್ತಿದೆ. ಈ ಮಧ್ಯೆ ಕೋವಿಡ್-19 ರೋಗದ 3 ನೇ ಅಲೆಯು ಕೂಡ ತಲೆದೋರುತ್ತಿರುವುದನ್ನು ಆರೋಗ್ಯ ಇಲಾಖೆಯು ಎಚ್ಚರಿಸಿರುವುದು ಆತಂಕಕಾರಿ ಸಂಗತಿಯಾಗಿದೆ.
ಇಂತಹ ಸನ್ನಿವೇಶದಲ್ಲಿ ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡುವುದು, ಹಾಗೂ ಇನ್ನಿತರ ಕೋವಿಡ್-19 ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತೀ ಅನಿವಾರ್ಯವಾಗಿದ್ದು, ಜಿಲ್ಲೆಯ ಜನರ ಆರೋಗ್ಯ ಹಿತದೃಷ್ಟಿಯಿಂದ ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸುವುವಂತೆ ಮಾಡಲು, ಇನ್ನು ಮುಂದೆ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಜನರನ್ನು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿರುತ್ತಾರೆ.