ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ʼಕ್ಯಾಪ್ಟನ್ ಅಮರೀಂದರ್ ಸಿಂಗ್ʼ ರಾಜೀನಾಮೆ

ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಇಂದು ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವ್ರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಮಧ್ಯಾಹ್ನ 2 ಗಂಟೆಯ ನಂತರ ಚಂಡೀಗಢದ ಅವರ ಅಧಿಕೃತ ನಿವಾಸದಲ್ಲಿ ಅವರ ಆಪ್ತ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದಕ್ಕೂ ಮುನ್ನ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿ, ಪದೇ ಪದೇ ಅವಮಾನಕ್ಕೆ ಗುರಿಯಾಗಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗುತ್ತಿದೆ.
ಅಮರಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬದಲಾಯಿಸಬೇಕೆಂದು 50ಕ್ಕೂ ಹೆಚ್ಚು ಶಾಸಕರು ಪಕ್ಷದ ಹೈಕಮಾಂಡ್ʼಗೆ ಪತ್ರ ಬರೆದ ನಂತರ ಈ ಬೆಳವಣಿಗೆ ನಡೆದಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.
ಅಮರಿಂದರ್ ಸಿಂಗ್ ಅವರ ಮಗ ರಣಿಂದರ್ ಸಿಂಗ್ ಅವರು ತಮ್ಮ ಟ್ವಿಟರ್ ಹ್ಯಾಂಡಲ್ ನಲ್ಲಿ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ತಮ್ಮ ತಂದೆಯೊಂದಿಗೆ ರಾಜ್ ಭವನಕ್ಕೆ ಹೋಗುವುದಾಗಿ ತಿಳಿಸಿದ್ದು, ಅಲ್ಲಿ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.