ಕರಾವಳಿ

ಸಾರ್ವಜನಿಕರಿಗೆ ಕಂದಾಯ ಸೇವೆಗಳು ಸಮರ್ಪಕವಾಗಿ ತಲುಪಬೇಕು: ಶಾಸಕ ರಘುಪತಿ ಭಟ್

ಉಡುಪಿ: ಸಾರ್ವಜನಿಕರಿಗೆ ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಸೇವೆಗಳನ್ನು ಸಮರ್ಪಕವಾಗಿ, ಮಧ್ಯವರ್ತಿಗಳ ಹಾವಳಿ ಇಲ್ಲದೆ ಸಕಾಲದಲ್ಲಿ ಒದಗಿಸುವ ಮೂಲಕ ಕಂದಾಯ ಸಮಸ್ಯೆಗಳನ್ನು ಸಮರ್ಪಕ ರೀತಿಯಲ್ಲಿ ಬಗೆಹರಿಸಲು ಅಧಿಕಾರಿಗಳು ಪ್ರಾಮಾಣಿಕ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.

“ಕಂದಾಯ ದಾಖಲೆ ಮನೆ ಬಾಗಿಲಿಗೆ” ಯೋಜನೆಯಡಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ರೈತರ ಮನೆಗಳಿಗೆ ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತೆರಳಿ ವಿತರಿಸಿ ನಂತರ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ರೂಪಿಸಿರುವ ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯು ಸಾರ್ವಜನಿಕರಿಗೆ ಬಹುಪಯೋಗಿ ಮತ್ತು ದೂರದೃಷ್ಠಿ ಹೊಂದಿರುವ ಜನಪರ ಕಾರ್ಯಕ್ರಮವಾಗಿದ್ದು, ಹಲವು ವರ್ಷಗಳಿಂದ ಕಂದಾಯ ಇಲಾಖೆಯಿಂದ ತಮಗೆ ಅಗತ್ಯವಿರುವ ದಾಖಲೆಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡಿರುವ ರೈತರ ಮನೆ ಬಾಗಲಿಗೆ ತೆರಳಿ ಅವರಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಉಚಿತವಾಗಿ ನೀಡುತ್ತಿರುವುದು ದೇಶದಲ್ಲೇ ಪ್ರಥಮವಾಗಿದೆ ಎಂದರು.

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡುವುದರ ಮೂಲಕ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೇವೆಗಳನ್ನು ಉತ್ತಮ ರೀತಿಯಲ್ಲಿ ತಲುಪಿಸಲು ಸಾಧ್ಯವಾಗಲಿದೆ. ಉಡುಪಿ ವಿಧಾನಸಭಾ ವ್ಯಾಪ್ತಿಯಲ್ಲಿ ಕಡತ ವಿಲೇವಾರಿ ಕಾರ್ಯಕ್ರಮ ಅಯೋಜಿಸುವ ಮೂಲಕ ಹಲವು ವರ್ಷಗಳಿಂದ ಬಾಕಿ ಇರುವ ಸಾರ್ವಜನಿಕರ ಕಡತಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಕಂದಾಯ ಇಲಾಖೆಯಲ್ಲಿ ಅಗತ್ಯ ದಾಖಲೆಗಳನ್ನು ಪಡೆಯಲು ಸಾರ್ವಜನಿಕರು ನಿಗದಿತ ಶುಲ್ಕ ಪಾವತಿ ಮತ್ತು ಕಾಯುವ ಪರಿಸ್ಥಿತಿ ಇತ್ತು. ಆದರೆ ಈ ಯೋಜನೆಯ ಮೂಲಕ ರೈತರ ಮನೆ ಬಾಗಿಲಿಗೆ ಪಹಣಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ,ಅಟ್ಲಾಸ್/ ಹಿಸ್ಸಾ ಸ್ಕೆಚ್ ಗಳನ್ನು ಉಚಿತವಾಗಿ ತಲುಪಿಸಲಾಗುತ್ತಿದೆ.

ಈಗ ನೀಡಲಾಗುತ್ತಿರುವ ದಾಖಲಾತಿಗಳಲ್ಲಿ ತಪ್ಪು ಗಳಿದ್ದಲ್ಲಿ ಸರಿಪಡಿಸಿಕೊಳ್ಳಲು ಸಹ ಅವಕಾಶವಿದೆ. ಬಹುತೇಕ ಸಾರ್ವಜನಿಕರು ತಮಗೆ ಸಂಬಂಧಿಸಿದ ಕಂದಾಯ ದಾಖಲೆಗಳು ಇರುವ ಬಗ್ಗೆ ಮಾಹಿತಿ ಇಲ್ಲದೇ, ವ್ಯಾಜ್ಯದ ಸಂದರ್ಭದಲ್ಲಿ ನ್ಯಾಯಾಲಯಗಳಲ್ಲಿ ತೊಂದರೆಗೀಡಾಗಬೇಕಾದ ಪರಿಸ್ಥಿತಿಗಳಿದ್ದು, ಈ ಯೋಜನೆಯ ಮೂಲಕ ಅತ್ಯವಶ್ಯಕ ಅಗತ್ಯ ದಾಖಲೆಗಳನ್ನು ಉಚಿತವಾಗಿ, ಮನೆ ಬಾಗಿಲಿನಲ್ಲಿಯೇ ಪಡೆಯಲು ಸಾಧ್ಯವಾಗಿದ್ದು, ಜಿಲ್ಲೆಯ 267 ಗ್ರಾಮಗಳಲ್ಲಿ ಸಾರ್ವಜನಿಕರಿಗೆ ದಾಖಲೆಗಳನ್ನು ವಿತರಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ತೆಂಕನಿಡಿಯೂರು ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ಸುರೇಶ್, ಉಪಾಧ್ಯಕ್ಷ ಅರುಣ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.
ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು. ಉಡುಪಿ ತಹಸೀಲ್ದಾರ್ ಅರ್ಚನಾ ಭಟ್ ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ವಂದಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!