ಭಾರತೀಯ ಬಾಹ್ಯಾಕಾಶ ಸಂಘ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಧ್ವನಿಯಾಗುವ ಉದ್ದೇಶದಿಂದ ರಚನೆಯಾಗಿರುವ ಭಾರತೀಯ ಬಾಹ್ಯಾಕಾಶ ಸಂಘವನ್ನು (Indian Space Association) ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.
‘ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಾಗಿ ಈ ಸಂಘ ಬದ್ಧತೆ ಪ್ರದರ್ಶಿಸಲಿದೆ. ಈ ರೀತಿ ದೃಢ ನಿರ್ಧಾರಗಳನ್ನು ಕೈಗೊಳ್ಳುವಂಥ ಸರ್ಕಾರವನ್ನು ದೇಶ ಹಿಂದೆಂದೂ ಕಂಡಿರಲಿಲ್ಲ’ ಎಂದು ಪ್ರಧಾನಿ ಮೋದಿ ಹೇಳಿದರು.
‘ನಷ್ಟದಲ್ಲಿದ್ದ ಸಾರ್ವಜನಿಕ ವಿಮಾನಯಾನ ಸಂಸ್ಥೆ ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸಿರುವುದು ನಮ್ಮ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ’ ಎಂದು ಪ್ರಧಾನಿ ತಿಳಿಸಿದರು.
ದೇಶದ ಬಾಹ್ಯಾಕಾಶ ಕ್ಷೇತ್ರದಿಂದ ರಕ್ಷಣಾ ಕ್ಷೇತ್ರವರೆಗೆ ಹಲವು ಕ್ಷೇತ್ರಗಳಲ್ಲಿ ಖಾಸಗಿಯವರಿಗೆ ಹೂಡಿಕೆ ಮಾಡಲು ಅವಕಾಶ ನೀಡಲಾಗುತ್ತಿದೆ. ರಾಷ್ಟ್ರೀಯ ಹಿತಾಸಕ್ತಿ ಹಾಗೂ ವಿವಿಧ ಪಾಲುದಾರರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಧಾನಿ ಸ್ಪಷ್ಟಪಡಿಸಿದರು.