ವಿಶಾಲ ಗಾಣಿಗ ರವರ ಪತಿ ರಾಮಕೃಷ್ಣ ಬಂಧನ.!

ಉಡುಪಿ : ವಿಶಾಲ ಗಾಣಿಗ ರವರ ಕೊಲೆಗೆ ಸಂಬಂಧಿಸಿದಂತೆ ಅವರ ಪತಿ ರಾಮಕೃಷ್ಣ ಗಾಣಿಗ ಹಾಗೂ ಸುಪಾರಿ ಕಿಲ್ಲರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆಗೊಳಿಸಿದ್ದಾರೆ.
ಈ ಪ್ರಕರಣದ ತನಿಖಾಧಿಕಾರಿಯಾಗಿರುವ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ರವರು ಬಂಧಿತ ರಾಮಕೃಷ್ಣ ಗಾಣಿಗನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ನ್ಯಾಯಾಲಯ ಆರೋಪಿಯನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಜುಲೈ 23 ರಂದು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪತ್ನಿಯನ್ನು ಕೊಲೆ ಮಾಡುವಂತೆ ರಾಮಕೃಷ್ಣ ಗಾಣಿಗ ಉತ್ತರ ಪ್ರದೇಶದ ಇಬ್ಬರು ಸುಪಾರಿ ಕಿಲ್ಲರ್‌ಗಳಿಗೆ ಸುಪಾರಿ ನೀಡಿದ್ದರು ಎಂಬುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇಬ್ಬರು ಸುಪಾರಿ ಕಿಲ್ಲರ್‌ಗಳಲ್ಲಿ ಓರ್ವನನ್ನು ಪೊಲೀಸ್ ತಂಡ ಉತ್ತರ ಪ್ರದೇಶದಲ್ಲಿ ಬಂಧಿಸಿ ಉಡುಪಿಗೆ ಕರೆದುಕೊಂಡು ಬರುತ್ತಿದೆ. ಇನ್ನೋರ್ವ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ವಿಶಾಲ ರವರ ಕೊಲೆಗೆ ಇಬ್ಬರ ಮಧ್ಯೆ ಇದ್ದ ವೈಮನಸ್ಸೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆದರೆ ಇದರ ಹಿಂದೆ ಬೇರೆ ಕಾರಣ ಕೂಡಾವಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದು, ಪತಿಯನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ತನಿಖೆ ಕೈಗೆತ್ತಿಕೊಳ್ಳಲಾಗಿದೆ.