ಮುಂದಿನ 18 ತಿಂಗಳಲ್ಲಿ 10 ಲಕ್ಷ ನೇಮಕಾತಿಗೆ ಪ್ರಧಾನಿ ಮೋದಿ ಸೂಚನೆ
ನವದೆಹಲಿ : ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್‌ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ಸೂಚನೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿ, ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್‌ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ನಿರ್ದೇಶನ ನೀಡಿದ್ದಾರೆ.
ಈ ಕುರಿತು ಪ್ರಧಾನಿ ಕಚೇರಿಯ ಟ್ವೀಟರ್‌ನಲ್ಲಿ ಮಾಹಿತಿ ನೀಡಿದ್ದು, ಜನರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ದೊಡ್ಡ ಹೆಜ್ಜೆ ಇಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಮೋದಿ ಸರ್ಕಾರ 10 ಲಕ್ಷ ಉದ್ಯೋಗಗಳನ್ನು ಒದಗಿಸಲಿದೆ ಎಂದು ತಿಳಿಸಲಾಗಿದೆ.
ಇನ್ನು ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಬಂದಿದೆ ಎನ್ನಲಾಗಿದೆ.